ಮಲಯಾಳಂ ಸಿನಿಮಾ ಮೆಚ್ಚಿದ ಕಿಚ್ಚಸುದೀಪ್

0

ನೈಜ ಘಟನೆ ಆಧಾರಿತ ಸಿನಿಮಾಗಳು ಪ್ರೇಕ್ಷಕರ ಮನ ಗೆಲ್ಲುತ್ತಿದ್ದು ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿವೆ. ಸದ್ಯ ಮಲಯಾಳಂನ ‘2018’ ಸಿನಿಮಾ ಭಾರಿ ಸದ್ದು ಮಾಡುತ್ತಿದ್ದು ಇದೀಗ ನಟ ಕಿಚ್ಚ ಸುದೀಪ್ ಚಿತ್ರವನ್ನು ಮೆಚ್ಚಿ ಟ್ವೀಟ್ ಮಾಡಿದ್ದಾರೆ.
‘ಕೇರಳದಲ್ಲಿ 2018ರಲ್ಲಿ ಪ್ರವಾಹ ಉಂಟಾದಾಗ ಮಾನವೀಯತೆ ಗೆದ್ದಿತ್ತು. ಈ ಧೈರ್ಯಶಾಲಿ ನೈಜ ಕಥೆಯು 2018 ಟೈಟಲ್ ನಲ್ಲಿ ತೆರೆಯಲ್ಲಿ ಅದ್ಭುತವಾಗಿ ಮೂಡಿಬಂದಿದ್ದು, ಕೇರಳ ಚಿತ್ರೋದ್ಯಮದ ಇತಿಹಾಸದಲ್ಲಿ ಅತಿದೊಡ್ಡ ಬ್ಲಾಕ್ ಬಸ್ಟರ್ ಆಗಿದೆ. ‘2018’ ಸಿನಿಮಾ ಕನ್ನಡಿಗರ ಹೃದಯವನ್ನೂ ಗೆಲ್ಲುತ್ತಿದೆ. ಅಭಿನಂದನೆಗಳು’ ಎಂದು ಸುದೀಪ್ ಅವರು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಇದು ನಿಜವಾದ ಕೇರಳ ಸ್ಟೋರಿ’ ಎಂದು ಅಭಿಮಾನಿಗಳು ಕಮೆಂಟ್ ಬಾಕ್ಸ್ನಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ನಿಮ್ಮ ಪ್ರೀತಿಗೆ ಧನ್ಯವಾದಗಳು. ಇಷ್ಟೇ ನಮಗೆ ಬೇಕಿರುವುದು’ ಎಂದು ಕೇರಳದಲ್ಲಿನ ಫ್ಯಾನ್ಸ್ ಕೂಡ ಕಮೆಂಟ್ ಮಾಡಿದ್ದಾರೆ.
2018ರಲ್ಲಿ ಕೇರಳದಲ್ಲಿ ಉಂಟಾದ ಪ್ರವಾಹವನ್ನು ಆಧರಿಸಿ ‘2018’ ಸಿನಿಮಾ ಸಿದ್ಧವಾಗಿದೆ. ಹಲವರ ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟದ ಘಟನೆಗಳನ್ನು ಈ ಚಿತ್ರದ ಮೂಲಕ ತೋರಿಸಲಾಗಿದ್ದು, ಅತಿ ಕಷ್ಟದ ಸಂದರ್ಭದಲ್ಲಿ ಕೇರಳದ ಪ್ರತಿಯೊಬ್ಬರು ಹೇಗೆ ನಡೆದುಕೊಂಡರು ಎಂಬ ವಿವರ ಈ ಸಿನಿಮಾದಲ್ಲಿ. ‘ಪ್ರತಿಯೊಬ್ಬರೂ ಹೀರೋ’ ಎಂಬ ಟ್ಯಾಗ್ಲೈನ್ ಗಮನ ಸೆಳೆದಿದೆ. 2018ರ ಪ್ರವಾಹದಲ್ಲಿ ಕೇರಳದ 400ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಅನೇಕರು ನಾಪತ್ತೆಯಾದರು. 1924ರ ಬಳಿಕ ಕೇರಳದಲ್ಲಿ ಉಂಟಾದ ಅತಿ ಭೀಕರ ಪ್ರವಾಹ ಅದು.
ಜೂಡ್ ಆಂಥೊನಿ ಜೋಸೆಫ್ ನಿರ್ದೇಶನದ ಈ ಸಿನಿಮಾ 160 ಕೋಟಿ ರೂಪಾಯಿಗಳನ್ನು ಗಳಿಸುವ ಮೂಲಕ ಮಲಯಾಳಂ ಚಿತ್ರರಂಗದ ಅತಿ ದೊಡ್ಡ ಬ್ಲಾಕ್ ಬಸ್ಟರ್ ಸಿನಿಮಾ ಎಂಬ ಖ್ಯಾತಿಗೆ ಪಾತ್ರವಾಗಿತ್ತು. ಟೊವಿನೋ ಥಾಮಸ್ ಜೊತೆ ಆಸಿಫ್ ಅಲಿ, ಅಪರ್ಣಾ ಬಾಲಮುರಳಿ, ವಿನೀತ್ ಶ್ರೀನಿವಾಸನ್, ಕಲೈಯರಸನ್, ಸುದೇಶ್, ಅಜು ವರ್ಗೀಸ್, ತನ್ವಿ ರಾಮ್, ಗೌತಮಿ ನಾಯರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed